ದೊಡ್ಡಬಳ್ಳಾಪುರ: 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುವ ಸಲುವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಭಾಗವಾಗಿ ವಸುಧಾ ವಂದನ ಕಾರ್ಯಕ್ರಮದಡಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಸಿಗಳನ್ನು ನೆಡಲಾಗುತ್ತಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು ತಿಳಿಸಿದ್ದಾರೆ.
‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದ ಭಾಗವಾಗಿ ರಾಷ್ಟ್ರಧ್ವಜ ವಿತರಣೆ, ಪಂಚಪ್ರಾಣ ಪ್ರತಿಜ್ಞಾವಿಧಿ ಬೋಧನೆ, ಪ್ರತೀ ಗ್ರಾಮ ಪಂಚಾಯಿತಿಯಿಂದ ಮಣ್ಣು ಸಂಗ್ರಹಣೆ, ಶಾಲಾ ಮಕ್ಕಳಿಗೆ ಕ್ರೀಡಾ ಕೂಟ ಆಯೋಜನೆ, ಅಮೃತ ಸರೋವರ ಅಂಗಳದಲ್ಲಿ ಧ್ವಜಾರೋಹಣ ಹಾಗೂ ವೀರ ಯೋಧರಿಗೆ ಗೌರವ ಸಲ್ಲಿಸುವುದಕ್ಕಾಗಿ ಶಿಲಾಫಲಕ ಅನಾವರಣ ಹೀಗೆ ಇನ್ನಿತರ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಸೋಮವಾರ ತಾಲ್ಲೂಕಿನ ವಿವಿಧ ಗ್ರಾಮಪಂಚಾಯಿತಿಗಳಿಗೆ ರಾಷ್ಟ್ರಧ್ವಜಗಳನ್ನು ವಿತರಿಸಲಾಯಿತು. ಸಾಮಾಜಿಕ ಅರಣ್ಯ ಇಲಾಖೆಯಿಂದ ಪ್ರತೀ ಗ್ರಾಮ ಪಂಚಾಯಿತಿಗೆ 75 ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಗಿದ್ದು, ವಸುಧಾ ವಂದನ್ ಕಾರ್ಯಕ್ರಮದಡಿ ಸಸಿಗಳನ್ನು ನೆಡಲಾಯಿತು.
ಈಗಾಗಲೇ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಕ್ರೀಡಾ ಕೂಟ ಆಯೋಜನೆ ಮಾಡಲಾಗಿದ್ದು ಸ್ವಾತಂತ್ರ್ಯ ದಿನಾಚರಣೆಯಂದು ಬಹುಮಾನ ವಿತರಿಸಲಾಗುವುದು. ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಆಯಾ ಗ್ರಾಮ ಪಂಚಾಯಿತಿಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಾಳೆಯ ಧ್ವಜಾರೋಹಣ ಹಾಗೂ ಶಿಲಾಫಲಕ ಅನಾವರಣಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.