ವಿಜಯಪುರ: ರೈತ ಸಮುದಾಯಕ್ಕಾಗುವ ತೊಂದರೆ ಇಡೀ ದೇಶಕ್ಕಾಗುವ ತೊಂದರೆಯಿದ್ದಂತೆ. ಹೀಗಾಗಿ ರೈತ ಸಮುದಾಯಕ್ಕೆ ಅನುಕೂಲವಾಗಲೆಂದು ಕೃಷಿ ಉತ್ಪನ್ನಗಳ ಸುಲಲಿತ ಮಾರಾಟಕ್ಕೆ ಅಂತರಾಜ್ಯ ನಿರ್ಬಂಧಗಳನ್ನು ಸಹ ತೆಗೆದುಹಾಕಲಾಗಿದೆ ಎಂದು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊರೊನಾ ಹಿನ್ನಲೆಯಲ್ಲಿ ರೈತ ಮತ್ತು ಕೃಷಿ ಚಟುವಟಿಕೆಗಳ ಕುರಿತು ಜಿಲ್ಲಾ ಕೃಷಿ, ತೋಟಗಾರಿಕೆ, ಆರೋಗ್ಯ, ಪೊಲೀಸ್ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸಭೆ ನಡೆಸಿದರು. ವಿಜಯಪುರ ಸೇರಿದಂತೆ ಮುಂಬೈ ಕರ್ನಾಟಕ ಭಾಗದಲ್ಲಿ ಬಹುಪಾಲು ರೈತರು ದ್ರಾಕ್ಷಿ ಬೆಳೆಯುತ್ತಿದ್ದಾರೆ.
ಕೊರೋನಾ ಕಾರಣದಿಂದಾಗಿ ದ್ರಾಕ್ಷಿ ಮಾರುಕಟ್ಟೆ ಕುಸಿದಿದ್ದು ಬೆಳೆಗಾರರು ಕಂಗಾಲಾಗಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸಚಿವರ ಗಮನಸೆಳೆದರು. ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಕೂಡಾ ಆನ್ ಲೈನ್ ಟ್ರೆಡಿಂಗ್ ಕೊರತೆಗಳ ಬಗ್ಗೆ ಸಚಿವರ ಗಮನ ಸೆಳೆದರು.
ರೈತರು, ಅಧಿಕಾರಿಗಳು ಮತ್ತು ಜಿಲ್ಲೆಯ ಶಾಸಕರಿಂದ ಅಗತ್ಯ ಮಾಹಿತಿ ಪಡೆದ, ಕೃಷಿ ಸಚಿವ ಬಿ.ಸಿ. ಪಾಟೀಲ್, ದ್ರಾಕ್ಷಿ ಬೆಳೆಗಾರರಿಗೆ ಅನುಕೂಲವಾಗುವ ರೀತಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು. ಇದೇ ವೇಳೆ, ದ್ರಾಕ್ಷಿ ಆನ್’ಲೈನ್ ವ್ಯಾಪಾರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ತೊಡಕುಗಳಿದ್ದರೂ ನಿವಾರಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.