ಖಾಸಗಿ ಶಿಕ್ಷಣ ಸಂಸ್ಥೆಗಳ ವಾರ್ಷಿಕ ನವೀಕರಣ ಪ್ರಕ್ರಿಯೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆನ್ ಲೈನ್ ಮೂಲಕವೇ ನಿರ್ವಹಿಸಲಾಗುವುದೆಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ರುಪ್ಸಾ ಸಂಘಟನೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳು ಶಿಕ್ಷಣ ವ್ಯವಸ್ಥೆಯ ಪ್ರಮುಖ ಭಾಗವಾಗಿರುವ ಹಿನ್ನೆಲೆಯಲ್ಲಿ, ಯಾವುದೇ ಕಾರಣಕ್ಕೂ ಅವು ಅನಗತ್ಯ ಶೋಷಣೆಗೊಳಗಾಗಬಾರದು. ಆಡಳಿತ ವ್ಯವಸ್ಥೆ ಪಾರದರ್ಶಕವಾಗಿರಬೇಕಾದಲ್ಲಿ ಈ ರೀತಿಯ ಕ್ರಮಗಳು ಮುಖ್ಯವಾಗುತ್ತವೆ. ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ಮಾರ್ಗದರ್ಶನದಂತೆ ನವೀಕರಣ ಪ್ರಕ್ರಿಯೆಯಲ್ಲಿ ಸುರಕ್ಷತಾ ಕ್ರಮಗಳು ಕಡ್ಡಾಯವಾಗಿದ್ದು ಅವುಗಳನ್ನು ಪಾಲಿಸಬೇಕಾದ್ದು ಆಡಳಿತ ಸಂಸ್ಥೆಗಳ ಜವಾಬ್ದಾರಿಯಾಗಿದೆ. ನ್ಯಾಯಾಲಯದ ಆದೇಶದಂತೆ ನಡೆಯಬೇಕಾದ ಹಿನ್ನೆಲೆಯಲ್ಲಿ ಈಗಾಗಲೇ ಮೂರು ತಿಂಗಳ ಕಾಲಾವಕಾಶ ನೀಡಿ ನವೀಕರಿಸಲು ಅನುಮತಿಸಲಾಗಿದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸದ ಶಾಲೆಗಳ ವಿರುದ್ಧ ನಿಯಮಗಳ ಅನುಸಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ಆದಾಗ್ಯೂ ಈ ವಿಷಯವನ್ನು ನಿಯಮಗಳ ವ್ಯಾಪ್ತಿಯಲ್ಲಿ ಇನ್ನಷ್ಟು ಸಹಾನುಭೂತಿಯಿಂದ ಗ್ರಹಿಸಲಾಗುವುದೆಂದರು.
ಆರ್.ಟಿ.ಇ ಅನುದಾನ ನೀಡಿಕೆ:
ಸರ್ಕಾರದಿಂದ 2019-20ನೇ ಸಾಲಿಗೆ ಸಂಬಂಧಿಸಿದಂತೆ ಒದಗಿಸಲಾಗಿರುವ ಆರ್.ಟಿ.ಇ ಅನುದಾನವನ್ನು ಸಂಪೂರ್ಣವಾಗಿ ಶಾಲೆಗಳಿಗೆ ಬಿಡುಗಡೆ ಮಾಡಲಾಗಿದ್ದು, ಆರ್.ಟಿ.ಇ ನಿಯಮಗಳ ಪ್ರಕಾರ ಶೈಕ್ಷಣಿಕ ವರ್ಷದ ಸೆಪ್ಟೆಂಬರ್ ಮತ್ತು ಜನವರಿ ತಿಂಗಳಲ್ಲಿ ಶುಲ್ಕ ಮರುಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಶಿಕ್ಷಕರ ಕಲ್ಯಾಣ ನಿಧಿಯಿಂದ ಕೆಲವು ಸೌಲಭ್ಯಗಳನ್ನು ವಿಸ್ತರಿಸುವ ಬಗ್ಗೆ ನಿಯಮಗಳ ವ್ಯಾಪ್ತಿಯಲ್ಲಿ ಪರಿಶೀಲಿಸಲಾಗುವುದೆಂದು ಸಚಿವರು ಹೇಳಿದರು.
ಶಾಲಾರಂಭದ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿಗೆ ಸಂಬಂಧಿಸಿದಂತೆ ಪರೀಕ್ಷಾಭಿಮುಖವಾಗಿ ಅವಶ್ಯಕವಿರುವ ಪಠ್ಯವಸ್ತು ಹಾಗೂ ಶೈಕ್ಷಣಿಕ ವೇಳಾಪಟ್ಟಿ ಕುರಿತಂತೆ ಶೀಘ್ರವಾಗಿ ನಿರ್ಣಯ ತೆಗೆದುಕೊಳ್ಳಲಾಗುವುದೆಂದು ಅವರು ಹೇಳಿದರು.
ಶಿಕ್ಷಣ ಸಂಸ್ಥೆಗಳು ಮಕ್ಕಳ ಹಿತದೃಷ್ಟಿಯಿಂದ ಉತ್ತಮ ಮೂಲ ಸೌಕರ್ಯಗಳನ್ನು ಒದಗಿಸಬೇಕೆಂದು ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯಗಳನ್ನು ಮಾಡಿಕೊಂಡಿದ್ದು, ಪ್ರಸಕ್ತ ವರ್ಷದಲ್ಲಿ ಒದಗಿಬಂದಿರುವ ದುಸ್ಥಿತಿಯ ಕಾರಣ ಇ.ಎಂ.ಐ ಮುಂದೂಡಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂಬ ಆಗ್ರಹದ ಹಿನ್ನೆಲೆಯಲ್ಲಿ, ಇದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ವಿಷಯವಾದ್ದರಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಪತ್ರ ಮುಖೇನ ಕೋರಲಾಗುವುದೆಂದು ಸಚಿವ ಸುರೇಶ್ ಕುಮಾರ್ ಹೇಳಿದರು.
1995 ರಿಂದ 2000 ರ ಅವಧಿಯಲ್ಲಿ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೊಳಪಡಿಸಬೇಕೆಂಬುದು ಸಹ ಶಿಕ್ಷಣ ಇಲಾಖೆಯ ನಿಲುವಾಗಿದ್ದು, ಈ ಬಗ್ಗೆ ಬಜೆಟ್ ಪೂರ್ವದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದೆಂದು ಸಚಿವರು ಹೇಳಿದರು.