ಸಚಿವ ಸಿ.ಟಿ.ರವಿ ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ; ಹೆಚ್ಡಿಕೆ ಆಕ್ರೋಶ

ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಸಚಿವ ಸಿ.ಟಿ.ರವಿ ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿನ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು ಎಂದಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ ಹತ್ತಿಕ್ಕಲು ವಿಶೇಷ ತಂಡ ರಚಿಸಿದ್ದೆ. ಇದರಿಂದ ಕನಲಿ ಹೋಗಿದ್ದ ದಂಧೆಕೋರರು ಶ್ರೀಲಂಕಾ ಹಾಗೂ ಮುಂಬೈಗೆ ಹಾರಿ ಹೋಗಿದ್ದರು. ಆಮೇಲೆ ಶಾಸಕರನ್ನು ಮುಂಬೈಗೆ ಕರೆದೊಯ್ಯುವಾಗ ಶಾಸಕರ ಜೊತೆ ಕಂಪನಿ ಕೊಟ್ಟಿದ್ದರು ಎಂದು ಅವರು ಆರೋಪ ಮಾಡಿದ್ದಾರೆ.

ಸಿ.ಟಿ. ರವಿ ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಬಗ್ಗೆ ಮಾತನಾಡಿದರೆ ನಾನು ಸುಮ್ಮನಿರಲ್ಲ. ಅಧಿಕಾರದಲ್ಲಿ ಇರುವ ಸಚಿವರು ಮಾತಿನಲ್ಲಿ ನಿಗಾ ಇಡುವುದು ಒಳಿತು ಎಂದು ಕುಮಾರಸ್ವಾಮಿ ಎಚ್ಚರಿಕೆಯನ್ನೂ ನೀಡಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್, ಮಾಫಿಯಾ ಬಳಸಿಕೊಂಡೇ ನಮ್ಮ ಸರಕಾರದಲ್ಲಿದ್ದ ಶಾಸಕರನ್ನು ಬಿಜೆಪಿಯವರು ಬುಕ್ ಮಾಡಿಕೊಂಡಿದ್ದರು ಎಂಬುದು ಗುಟ್ಟಾಗಿ ಉಳಿದಿಲ್ಲ. ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಎರಡು ಗಂಟೆಗೊಂದು ವಿಶೇಷ ವಿಮಾನದ ಮೂಲಕ ಕರೆದುಕೊಂಡು ಹೋದಾಗ ಯಾರು ಜೊತೆಯಲ್ಲಿ ಇದ್ದರು ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ಕುಮಾರಸ್ವಾಮಿಯವರು ಬಿಜೆಪಿ ನಾಯಕರ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.

 

Related posts