ಬೈಂದೂರು: ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋವುಗಳ ಕಳ್ಳತನ ಹಾಗೂ ಅಕ್ರಮ ಗೋಸಾಗಾಟದ ಘಟನೆಗಳು ನಿರಂತರವಾಗಿ ನಡೆಯುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ, ತಪ್ಪಿತಸ್ಥರನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕು ಘಟಕ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.
ಮಾರಣಕಟ್ಟೆ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗೋವುಗಳ ಕಳ್ಳತನ ಮತ್ತು ಅಕ್ರಮ ಸಾಗಾಟ ನಡೆಯುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ. ಕೆಲವು ಸಂದರ್ಭಗಳಲ್ಲಿ ಮಾರಕಾಯುಧಗಳನ್ನು ಬಳಸಿ ಗೋವುಗಳನ್ನು ಹತ್ಯೆ ಮಾಡಿ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳೂ ಇವೆ. ಈ ಸಂಬಂಧ ಸ್ಥಳೀಯ ನಿವಾಸಿಯೊಬ್ಬರು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕ್ರೈಂ ನಂಬರ್ 57/2026ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವೇದಿಕೆ ತಿಳಿಸಿದೆ.
ಮಾರಣಕಟ್ಟೆ ದೇವಸ್ಥಾನದ ಸಮೀಪ ಮಲಗಿದ್ದ ಗೋವುಗಳನ್ನು ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಿಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ವೇದಿಕೆ ಆರೋಪಿಸಿದೆ. ಧಾರ್ಮಿಕ ಕ್ಷೇತ್ರದ ಸಮೀಪ ಇಂತಹ ಘಟನೆಗಳು ನಡೆಯುತ್ತಿರುವುದು ಭಕ್ತರ ಭಾವನೆಗಳಿಗೆ ನೋವುಂಟುಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಗೋವುಗಳು ರೈತ ಕುಟುಂಬಗಳ ಜೀವನೋಪಾಯದ ಪ್ರಮುಖ ಭಾಗವಾಗಿದ್ದು, ಕೊಟ್ಟಿಗೆಯಿಂದ ರಾತ್ರೋರಾತ್ರಿ ಕಳ್ಳತನ ಮಾಡಲಾಗುತ್ತಿರುವುದು ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಘಟನೆಗಳ ಹಿಂದೆ ಸಂಘಟಿತ ಜಾಲವಿದೆಯೇ ಎಂಬ ಬಗ್ಗೆಯೂ ಪೊಲೀಸರು ಸಮಗ್ರ ತನಿಖೆ ನಡೆಸಬೇಕು ಎಂದು ವೇದಿಕೆ ಒತ್ತಾಯಿಸಿದೆ.
ಐದು ಪ್ರಮುಖ ಬೇಡಿಕೆಗಳು
ಗೋವುಗಳ ಕಳ್ಳತನ ಹಾಗೂ ಅಕ್ರಮ ಸಾಗಾಟದಲ್ಲಿ ಭಾಗಿಯಾಗಿರುವವರ ವಿರುದ್ಧ ಅನ್ವಯಿಸುವ ಕಾನೂನುಗಳ ಅಡಿಯಲ್ಲಿ ಕಠಿಣ ಪ್ರಕರಣ ದಾಖಲಿಸಬೇಕು. ಇತ್ತೀಚೆಗೆ ಕಳ್ಳತನವಾಗಿರುವ ಗೋವುಗಳನ್ನು ಪತ್ತೆಹಚ್ಚಿ, ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಲಾಗಿದೆ.
ಅನುಮಾನಾಸ್ಪದ ವಾಹನಗಳನ್ನು ಕಾನೂನುಬದ್ಧವಾಗಿ ಪರಿಶೀಲಿಸಿ, ಮಾರಣಕಟ್ಟೆ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು. ಈ ಹಿಂದೆ ನಡೆದಿರುವ ಗೋವು ಕಳ್ಳತನದ ಪ್ರಕರಣಗಳನ್ನೂ ಮರುಪರಿಶೀಲಿಸಿ, ಬಾಕಿ ಇರುವ ಪ್ರಕರಣಗಳ ಆರೋಪಿಗಳನ್ನು ಪತ್ತೆಹಚ್ಚಬೇಕು ಎಂದು ವೇದಿಕೆ ಮನವಿ ಮಾಡಿದೆ.
ಗೋವುಗಳ ರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ಇಲಾಖೆ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಕಳ್ಳತನ ಮತ್ತು ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಬೇಕು ಎಂದು ಹಿಂದು ಜಾಗರಣ ವೇದಿಕೆ ಆಗ್ರಹಿಸಿದೆ.
ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿದರೆ ಅಥವಾ ಇಂತಹ ಘಟನೆಗಳು ಮುಂದುವರಿದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಾಗೂ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ವೇದಿಕೆ ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ವಕೀಲ ನಾಗರಾಜ್ ಗೋಳಿಹೊಳೆ, ಶಂಕರ ಕೋಟ, ಸುಭೋದ್ ಜಡ್ಕಲ್, ದಿನಕರ ಅದೇಲು, ವಿರಣ್ಣ ಶೆಟ್ಟಿ ಜಡ್ಕಲ್, ಶ್ರೀನಿವಾಸ್ ಮಂಜ, ಪ್ರವೀಣ ಜಡ್ಕಲ್, ಗೋಪಾಲ ಜಡ್ಕಲ್, ನವೀನ್ ಗಂಗೊಳ್ಳಿ, ಕಾರ್ತಿಕ್ ಗಂಗೊಳ್ಳಿ ಹಾಗೂ ಹರೀಶ ಸಳ್ಕೋಡು ಉಪಸ್ಥಿತರಿದ್ದರು.

