ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಜಯದೇವ ಹೃದ್ರೋಗ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಹೃದ್ರೋಗಕ್ಕೆ ಪರಿಣಾಮಕಾರಿ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ ಬೆಂಗಳೂರು, ಮೈಸೂರು ಮತ್ತು ಕಲಬುರಗಿಯ ಜಯದೇವ ಹೃದ್ರೋಗ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರಗಳ ಮೂಲ ಸೌಲಭ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ ಗುಣಮಟ್ಟದ ಚಿಕಿತ್ಸೆಗೆ ನೀಲಿನಕ್ಷೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.
ಹೃದ್ರೋಗಗಳಿಂದಾಗುವ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ, ಶೇ.25 ರಷ್ಟು ಸಾವು ಹೃದಯ ಸಂಬಂಧಿ ಕಾಯಿಲೆಗಳಿಂದ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಭಾಗಗಳ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ನೀಲಿನಕ್ಷೆ ಸಿದ್ಧಪಡಿಸಲಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ 700 ಹಾಸಿಗೆಗಳಿದ್ದು, ಅದನ್ನು 1 ಸಾವಿರಕ್ಕೆ ಹೆಚ್ಚಿಸಲಾಗುವುದು. ಈ ಮೂಲಕ ಒಂದೇ ಸೂರಿನ ಅಡಿಯಲ್ಲಿ ಒಂದು ಸಾವಿರ ಹಾಸಿಗೆಗಳಿರುವ ದೇಶದ ಏಕೈಕ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಸಂಸ್ಥೆ ಪಾತ್ರವಾಗಲಿದೆ. ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಷನ್‍ನ ಸುಧಾಮೂರ್ತಿ ಅವರು 50 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 350 ಹಾಸಿಗೆಗಳ ಆಸ್ಪತ್ರೆ ಕಟ್ಟಡವನ್ನು ನಿರ್ಮಿಸಿಕೊಡುತ್ತಿದ್ದಾರೆ ಎಂದು ಸುಧಾಕರ್ ವಿವರಿಸಿದರು.
ಈ ಮೊದಲು ಕೇವಲ ಕಟ್ಟಡವನ್ನು ಮಾತ್ರ ನಿರ್ಮಿಸಿಕೊಡುವುದಾಗಿ ತಿಳಿಸಿದ್ದ ಸುಧಾಮೂರ್ತಿ ಅವರು, ಅದಕ್ಕೆ ಬೇಕಾದ ಯಂತ್ರೋಪಕರಣ, ಒಳ ವಿನ್ಯಾಸ ಸಹಿತ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ ಎಂದರು.