ಬೆಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಯೋಜಿಸಿರುವ ‘ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ 2026’ ಬ್ಯಾಡ್ಮಿಂಟನ್ ಟೂರ್ನಮೆಂಟ್ಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಇದೇ ವೇಳೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿರುವ ಆಟಗಾರರಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ, ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳ ಆಯೋಜನೆಯು ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದರು. ಇಂತಹ ಸ್ಪರ್ಧೆಗಳು ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ವೇದಿಕೆ ಒದಗಿಸುವುದರ ಜತೆಗೆ, ಉನ್ನತ ಸಾಧನೆಗಳನ್ನು ಮಾಡಲು ಪ್ರೇರೇಪಿಸುತ್ತವೆ ಎಂದರು.

ಉದಯೋನ್ಮುಖ ಆಟಗಾರರು ತಮ್ಮ ಕೌಶಲ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಲು ಹಾಗೂ ಉನ್ನತ ಮಟ್ಟದ ಸ್ಪರ್ಧೆಗಳಲ್ಲಿ ಅವಕಾಶಗಳನ್ನು ಪಡೆಯಲು ಇಂತಹ ಟೂರ್ನಮೆಂಟ್ಗಳು ಸಹಕಾರಿಯಾಗುತ್ತವೆ. ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಅಂತರರಾಷ್ಟ್ರೀಯ ಕ್ರೀಡಾಕೂಟಗಳ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜು, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಕುಮಾರ್ ಬಂಗಾರಪ್ಪ, ಕಾರ್ಯದರ್ಶಿ ಮುರಳೀಧರ್ ಹಾಗೂ ಬ್ಯಾಡ್ಮಿಂಟನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗುರುಪ್ರಸಾದ್ ಉಪಸ್ಥಿತರಿದ್ದರು.

