ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್’ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಕನ್ನಡ ಸಂಘಟನೆಗಳ ಮನವೊಲಿಕೆಗೆ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸಿ.ಟಿ.ರವಿ ಪ್ರಯತ್ನ ನಡೆಸಿದ್ದಾರೆ.
ಬಂದ್ ಕುರಿತು ಪ್ರತಿಕ್ರಿಯಿಸಿರುವ ಅವರು, ಕರ್ನಾಟಕ ಬಂದ್ ಕರೆ ಕೊಟ್ಟಿರುವ ಕನ್ನಡ ಪರ ಸಂಘಟನೆ ಅಹವಾಲನ್ನು ಸರ್ಕಾರ ಆಲಿಸಿದೆ. ಕನ್ನಡ ಭಾಷಾ ಮಾಧ್ಯಮ, ಕನ್ನಡ ಉಳಿಸುವ ಬೆಳೆಸುವ ಕೆಲಸಕ್ಕೆ ಸರ್ಕಾರ ಬದ್ದವಾಗಿದೆ ಎಂದರು.
ಸರೋಜಿನಿ ಮಹಿಷಿ ವರದಿ ಜಾರಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದ ಅವರು, ಖಾಸಗಿ ವಲಯದಲ್ಲಿ ವರದಿ ಜಾರಿ ಸುಲಭವಲ್ಲ. ಕಾರ್ಮಿಕರ ಕೊರತೆ ಸಹಿತ ಹಲವು ಸಮಸ್ಯೆಗಳು ಖಾಸಗಿ ವಲಯವನ್ನು ಆವರಿಸಿರುವುದರಿಂದಾಗಿ, ಪ್ರಮುಖರೊಂದಿಗೆ ಚರ್ಚಿಸಿ ನಿರ್ಧಾರ ತೆಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸಲು ನಮ್ಮ ಸಮ್ಮತಿ ಇದೆ. ಈ ವಿಚಾರದಲ್ಲಿ ಸುಪ್ರಿಂ ಕೋರ್ಟನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಅವಕಾಶ ಇದೆಯೇ ಎಂದು ಪರಿಶೀಲಿಸಲಾಗುತ್ತಿದೆ ಎಂದು ಸಚಿವ ಸಿ.ಟಿ.ರವಿ ಹೇಳಿದರು.
ಇದೇ ವೇಳೆ, ಬಂದ್ ಕರೆ ಹಿಂದೆ ಪಡೆಯುವಂತೆ ಅವರು ಕನ್ನಡಪರ ಸಂಘಟನೆಗಳ ಮುಖಂಡರಿಗೆ ಮನವಿ ಮಾಡಿದರು.