ಬೆಂಗಳೂರು: ರಾಜ್ಯದ ಆದಿವಾಸಿ ಹಾಗೂ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಪ್ರತ್ಯೇಕವಾಗಿ ‘ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ’ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ನೂತನ ನಿಗಮದ ಸ್ಥಾಪನೆಗೆ ₹33.36 ಕೋಟಿ ಅನುದಾನ ಅಗತ್ಯವಿದ್ದು, ಆರ್ಥಿಕ ಇಲಾಖೆ ನಿಗದಿಪಡಿಸಿರುವ ಅನುದಾನದ ಮಿತಿಯೊಳಗೆ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮೇದಾರ ಅಭಿವೃದ್ಧಿ ನಿಗಮ ಹಾಗೂ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ.

ಆದರೆ ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುವ ಇರುಳ, ಸೋಲಿಗ, ಜೇನುಕುರುಬ, ಕಾಡುಕುರುಬ, ಕುಡಿಯ, ಸಿದ್ದಿ ಸೇರಿದಂತೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ನಿಗಮದ ಅಗತ್ಯವನ್ನು ಸರ್ಕಾರ ಗುರುತಿಸಿದೆ.
ಈ ಹಿನ್ನೆಲೆಯಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದಂತೆ ನೂತನ ನಿಗಮ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ.
ಸಚಿವ ಸಂಪುಟಕ್ಕೆ ಸಲ್ಲಿಸಲಾದ ಪ್ರಸ್ತಾವನೆಯ ಪ್ರಕಾರ, ನಿಗಮದ ವ್ಯಾಪ್ತಿಗೆ ಒಟ್ಟು 33 ಪರಿಶಿಷ್ಟ ಪಂಗಡಗಳ ಸಮುದಾಯಗಳನ್ನು ಸೇರಿಸಲು ಉದ್ದೇಶಿಸಲಾಗಿದೆ.
ನಿಗಮದ ಮೂಲಕ ಆದಿವಾಸಿ ಸಮುದಾಯಗಳ ಆರ್ಥಿಕ ಸಬಲೀಕರಣ, ಸ್ವಯಂ ಉದ್ಯೋಗ ಮತ್ತು ಉದ್ಯಮಶೀಲತೆಗೆ ಪ್ರೋತ್ಸಾಹ ನೀಡಲಾಗುವುದು. ಕೌಶಲಾಭಿವೃದ್ಧಿ ತರಬೇತಿ, ಮಾರುಕಟ್ಟೆ ಬೆಂಬಲ ಹಾಗೂ ಜೀವನೋಪಾಯ ವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಲು ಉದ್ದೇಶಿಸಲಾಗಿದೆ.
ಆದಿವಾಸಿ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ನೂತನ ನಿಗಮದ ಪ್ರಮುಖ ಉದ್ದೇಶವಾಗಿದೆ.

