ಪ್ರವಾಹ ಪರಿಸ್ಥಿತಿ; 395 ಕೋಟಿ ರೂ ತುರ್ತು ನೆರವಿಗಾಗಿ ಕೇಂದ್ರಕ್ಕೆ ಕರ್ನಾಟಕ ಮೊರೆ

ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯಾಗುತ್ತಿದ್ದು ಅನೇಕ ರಾಜ್ಯಗಳು ಪ್ರವಾಹದಿಂದ ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪರಿಸ್ಥಿತಿ ಬಗ್ಗೆ ಪರಾಮರ್ಶೆ ನಡೆಸಿದರು.

ಕರ್ನಾಟಕದ ಪ್ರವಾಹ ಪರಿಸ್ಥಿತಿ ಕುರಿತು‌ ಪ್ರಧಾನಿಯವರ ಗಮನಸೆಳೆದ ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು ನಾಲ್ಕು ಸಾವಿರ ಕೋಟಿ ರೂಪಾಯಿ ವಿಶೇಷ ಆರ್ಥಿಕ ನೆರವನ್ನು ಒದಗಿಸುವಂತೆ ಪ್ರಧಾನಿಯವರಿಗೆ ಮನವಿ ಮಾಡಿದರು. ತಕ್ಷಣದ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗೆ ಎಸ್‌.ಡಿ ಆರ್.ಎಫ್ ನ ಕಂತು 395 ಕೋಟಿ ರೂಪಾಯಿಗಳನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಕರ್ನಾಟಕ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಯನ್ನು ನಿರ್ವಹಿಸಲು ಈಗಾಗಲೇ ತರಬೇತಿ ಪಡೆದ 200 ಎಸ್.ಡಿ.ಆರ್.ಎಫ್ ಸಿಬ್ಬಂದಿ , ನಾಲ್ಕು ಎನ್.ಡಿ.ಆರ್.ಎಫ್ ತಂಡಗಳು ಹಾಗೂ ನಾಲ್ಕು ರಕ್ಷಣಾ ಹೆಲಿಕಾಪ್ಟರ್ ಗಳನ್ನು ಒದಗಿಸಲಾಗಿದ್ದು, ಹೆಚ್ಚುವರಿಯಾಗಿ 4 ಎನ್.ಡಿ.ಆರ್.ಎಫ್ ತಂಡಗಳನ್ನು ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದರು.

Related posts