ನಾರಿ ‘ಶಕ್ತಿ’ಯ ಸಾರಥ್ಯ..! ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯ ಪದಗ್ರಹಣ;

ಬೆಂಗಳೂರು: ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಗುರುವಾರ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ವಹಿಸಿಕೊಂಡರು.

ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಹ್ಯಾರಿಸ್, ಅಲ್ಲಂ ಪ್ರಭು ಪಾಟೀಲ್, ವಿಧಾನ ಪರಿಷತ್ತಿನ ಸದಸ್ಯ ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಜಿ ಯುವ ಕಾಂಗ್ರಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮೊದಲಾದವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸೌಮ್ಯ ರೆಡ್ಡಿ, ಶಕ್ತಿ ಯೋಜನೆಯಿಂದ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆ ಸ್ವಾಭಿಮಾನದಿಂದ ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾಳೆ. ಇನ್ನು ಗೃಹಲಕ್ಷ್ಮಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರು ಹಳ್ಳಿಯಲ್ಲಿ ಗ್ರಂಥಾಲಯ ಆರಂಭಿಸಿದರೆ, ಮತ್ತೆ ಕೆಲವು ಮಗನಿಗೆ ಬೈಕ್ ಕೊಡಿಸಿದ್ದಾರೆ. ಮತ್ತೆ ಕೆಲವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದಾರೆ, ಗಂಡನ ಶಸ್ತ್ರ ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಕೆಲವು ಮಹಿಳೆಯರು ತಮ್ಮ ಮನೆಗೆ ಫ್ರಿಡ್ಜ್, ಟಿವಿ ಹಾಗೂ ಚಿನ್ನಾಭರಣ ಖರೀದಿ ಮಾಡುತ್ತಿದ್ದಾರೆ ಎಂದರು.

ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕ ಹಾಗೂ ರಾಜಕೀಯವಾಗಿ ಸರಿಯಾದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1984ರಲ್ಲಿ ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆ ಮಾಡಿದರು. 40 ವರ್ಷಗಳ ನಂತರ ಈ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ನನ್ನ ಸೌಭಾಗ್ಯ ಎಂದವರು ಹೇಳಿದರು.

Related posts