ತುಮಕೂರು: ಯುವಜನತೆ ದೇಶದ ಶಕ್ತಿ ಮತ್ತು ಭವಿಷ್ಯದ ಭರವಸೆಯಾಗಿದ್ದು, ಅವರಿಗೆ ಕೌಶಲ್ಯ, ಉದ್ಯೋಗ, ಉದ್ಯಮಶೀಲತೆ ಹಾಗೂ ನಾಯಕತ್ವದ ಅವಕಾಶಗಳನ್ನು ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದರು.
ನಗರದ ಅಮಾನಿಕೆರೆ ಆವರಣದ ಗಾಜಿನ ಮನೆಯಲ್ಲಿ ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ 2026-27ನೇ ಸಾಲಿನ ರಾಜ್ಯಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯುವಜನೋತ್ಸವಗಳು ಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸುವುದರ ಜತೆಗೆ ನಾಡಿನ ಇತಿಹಾಸ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಪರಿಚಯ ಮಾಡಿಕೊಡುತ್ತವೆ. ಯುವಜನರಲ್ಲಿ ಸೃಜನಶೀಲತೆ, ನಾಯಕತ್ವ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದರು.

ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಹೂಡಿಕೆದಾರರ ಸಮಾವೇಶದಲ್ಲಿ ಸುಮಾರು ₹30.56 ಲಕ್ಷ ಕೋಟಿ ಹೂಡಿಕೆಗೆ ಒಪ್ಪಂದಗಳಾಗಿದ್ದು, ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಬೆಂಗಳೂರು ಮಾತ್ರವಲ್ಲದೆ ಬೆಳಗಾವಿ, ಬೀದರ್, ಮಂಗಳೂರು ಮತ್ತು ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.
ನವೆಂಬರ್ 29 ಮತ್ತು 30ರಂದು ನಡೆಯುವ ಯುವಜನೋತ್ಸವದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಯ್ಕೆಯಾದ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಜಾನಪದ ನೃತ್ಯ, ಗೀತೆ, ಚಿತ್ರಕಲೆ, ನುಕ್ಕಡ್ ನಾಟಕ ಮತ್ತು ಕವಿತೆ ಬರೆಯುವ ಸ್ಪರ್ಧೆಗಳು ನಡೆಯಲಿವೆ. ವಿಜೇತರಿಗೆ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎಂ.ಎನ್. ಅನುಚೇತ್, ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜ ಬಿ.ವಿ., ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಪ್ರಭಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ ಸೇರಿದಂತೆ ಅಧಿಕಾರಿಗಳು ಹಾಗೂ ಸ್ಪರ್ಧಿಗಳು ಉಪಸ್ಥಿತರಿದ್ದರು.

