ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಬಂಧನ

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನದ ಬೆನ್ನಲ್ಲೇ ಮಧ್ಯವರ್ತಿ ಹಾಗೂ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಅವರನ್ನು ಸಿಐಡಿ ಬಂಧಿಸಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದ ನಿವಾಸಿಯಾಗಿರುವ ಕನ್ನಾಳೆ, ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರೂ ಆಗಿದ್ದಾರೆ. ಭಾನುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು, ಬಳಿಕ ಭಾಲ್ಕಿಯಲ್ಲಿರುವ ಅವರ ಮನೆಗಳಲ್ಲೂ ಶೋಧ ನಡೆಸಿದ್ದಾರೆ.

ಗ್ಯಾನೇಂದ್ರ ಕುಮಾರ್ ಮತ್ತು ಬಸವರಾಜ್ ಕನ್ನಾಳೆ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 9ರವರೆಗೆ ಸಿಐಡಿ ಕಸ್ಟಡಿಗೆ ನೀಡಲಾಗಿದೆ.

₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ?

ತನಿಖೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಸಿಐಡಿಗೆ ಲಭ್ಯವಾಗಿದೆ. ಪರೀಕ್ಷೆಗಳ ಉಸ್ತುವಾರಿ ಹಾಗೂ ಪರೀಕ್ಷಾ ನಿಯಂತ್ರಕರಾಗಿದ್ದ ಗ್ಯಾನೇಂದ್ರ ಕುಮಾರ್ ಅವರೇ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಮುಖ ಸೂತ್ರಧಾರ ಎನ್ನಲಾಗಿದೆ.

ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ಮಧ್ಯವರ್ತಿ ಬಸವರಾಜ್ ಕನ್ನಾಳೆ ಮೂಲಕ ಅಭ್ಯರ್ಥಿಗಳಿಗೆ ತಲಾ ₹40 ಲಕ್ಷಕ್ಕೆ ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪವಿದೆ.

ಹಗರಣಕ್ಕೆ ಸಂಬಂಧಿಸಿದ ಸಾಕ್ಷ್ಯ ನಾಶಪಡಿಸಲು ಒಎಂಆರ್ ಶೀಟ್‌ಗಳಲ್ಲಿ ತಿದ್ದುಪಡಿ ಹಾಗೂ ಸ್ಟ್ರಾಂಗ್‌ರೂಮ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಲು ಯತ್ನಿಸಿರುವುದು ಕೂಡ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

Related posts