ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಬಹು ದಿನಗಳ ಬೇಡಿಕೆಯಾಗಿದ್ದ ಪಿಂಚಣಿ ಯೋಜನೆಗೆ (ಎನ್‌ಪಿಎಸ್) ಸರ್ಕಾರ ಹಸಿರು ನಿಶಾನೆ ತೋರಿಸಿದೆ.
ಸರ್ಕಾರಿ ವೈದ್ಯ, ದಂತ ವೈದ್ಯಕೀಯ ಕಾಲೇಜುಗಳಿಗೆ ಹೊಂದಿಕೊಂಡಿರುವ ಬೋಧಕ ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಈ ಯೋಜನೆ ಲಾಭ ಪಡೆಯಲಿದ್ದಾರೆ.
ಸಚಿವ ಸುಧಾಕರ್ ಅವರು ಅಧಿಕಾರವಹಿಸಿಕೊಂಡ ಬಳಿಕ ಅವರನ್ನು ನಿಯೋಗದಲ್ಲಿ ಭೇಟಿ ಮಾಡಿದ್ದ ಇಲಾಖೆಯ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಪಿಂಚಣಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮನವಿ ಸಲ್ಲಿಸಿದ್ದರು. ಮನವಿ ಸ್ವೀಕರಿಸಿದ್ದ ಸಚಿವರು ಕ್ರ ಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಬೇಡಿಕೆಗೆ ಅನುಮೋದನೆ ನೀಡುವಂತೆ ಸಚಿವ ಸುಧಾಕರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದುಅಧಿಕೃತ ಆದೇಶ ಹೊರಬಿದ್ದಿದೆ.
ಕೊರೋನಾದಿಂದಾಗಿ ಸರ್ಕಾರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದರೂ ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೆಡಿಕಲ್ ಕಾಲೇಜು ಆಸ್ಪತ್ರೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಎನ್‌ಪಿಎಸ್ ಯೋಜನೆ ಜಾರಿಗೊಳಿಸುವುದು ಸೂಕ್ತ ಎಂಬ ಸಚಿವ ಸುಧಾಕರ್ ಅವರ ಅಗ್ರಹಕ್ಕೆ ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿ, ತಕ್ಷಣ ಕ್ರಮ ಜರುಗಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅಂತಿಮವಾಗಿ ಹಣಕಾಸು ಇಲಾಖೆ ಸಮ್ಮತಿ ದೊರಕಿದ್ದು ಆದೇಶ ಹೊರಡಿಸಿದೆ.
ಒಟ್ಟು27 ಸಂಸ್ಥೆಗಳಲ್ಲಿ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ 5949ಅಧಿಕಾರಿ ಮತ್ತು ಸಿಬ್ಬಂದಿಗೆ ಯೋಜನೆ ಪ್ರಯೋಜನ ದೊರಕಲಿದೆ.