ಬೆಂಗಳೂರು: ಮುಡಾ ನಿವೇಶನ ಪ್ರಕರಣದ ತನಿಖೆಗೆ ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಆದರೆ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ನಾನ್ಯಾಕೆ ರಾಜೀನಾಮೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಜೆಪಿ ನಾಯಕರ ಆಗ್ರಹ ಕುರಿತಂತೆ ಪ್ರತಿಕ್ರಿಸಿದರು. ರಾಜೀನಾಮೆ ನೀಡಲ್ಲ, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ ಎಂದರು.
‘ನಾನು ಯಾವುದೇ ತಪ್ಪು ಮಾಡಿಲ್ಲ. ಸಿಎಂ ಸ್ಥಾನದಲ್ಲಿ ಮುಂದುವರಿಯಲು ಮುಜುಗರವಾಗುವುದಿಲ್ಲವೇ ಎಂದು ಕೇಳಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಗೋಧ್ರಾ ಹತ್ಯಾಕಾಂಡ ಆರೋಪದಲ್ಲಿ ಸಿಲುಕಿದ್ದ ಮೋದಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರೇ ಎಂದು ಪ್ರಶ್ನಿಸಿದರು. ಇಂದು ಮೋದಿ ಸರ್ಕಾರದ ಸಂಪುಟದಲ್ಲಿ ಸಚಿವರಾಗಿರುವ ಕುಮಾರಸ್ವಾಮಿ ಮೇಲೆ ಆರೋಪಗಳಿವೆಯಲ್ಲವೇ, ಅವರು ಜಾಮೀನು ಮೇಲೆ ಇದ್ದಾರೆ. ಅವರು ರಾಜೀನಾಮೆ ನೀಡಿದ್ದಾರೆಯೇ ಎಂದೂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.