ಬೆಂಗಳೂರು: ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಅಗತ್ಯ ವಸ್ತುಗಳು ಪಾರದರ್ಶಕ ಮತ್ತು ಪರಿಣಾಮಕಾರಿ ರೀತಿಯಲ್ಲಿ ಫಲಾನುಭವಿಗಳಿಗೆ ತಲುಪುವುದನ್ನು ಖಚಿತಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಗಳ ರಾಜ್ಯದ ಎಲ್ಲಾ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಈ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾವಾರು ಆಹಾರಧಾನ್ಯಗಳ ಸೋರಿಕೆ ಮತ್ತು ಅಕ್ರಮ ಸಾಗಣೆ ತಡೆಗೆ ಕೈಗೊಂಡಿರುವ ಕ್ರಮಗಳು, ರಾಜ್ಯಾದ್ಯಂತ GPS ಅಳವಡಿಕೆ ಪ್ರಗತಿ, ಫಲಾನುಭವಿಗಳ e-KYC ಪ್ರಗತಿ ಹಾಗೂ ಪಡಿತರ ಚೀಟಿಗಳಲ್ಲಿನ ಬದಲಾವಣೆ ಮತ್ತು ತಿದ್ದುಪಡಿಗೆ ಸಾರ್ವಜನಿಕರಿಂದ ಸ್ವೀಕರಿಸಲಾದ GSC ಅರ್ಜಿಗಳ ಪರಿಶೀಲನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.

ಇದರೊಂದಿಗೆ ಪಡಿತರ ಅಂಗಡಿಗಳ ನಿಯಮಿತ ತಪಾಸಣೆ, ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕ್ರಮಗಳ ಬಗ್ಗೆಯೂ ಚರ್ಚೆ ನಡೆಯಿತು.
ಜಿಲ್ಲಾಮಟ್ಟದಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಆಹಾರಧಾನ್ಯ ಸೋರಿಕೆ ಹಾಗೂ ಅಕ್ರಮ ಸಾಗಣೆಗೆ ಕಡಿವಾಣ ಹಾಕಲು ಜಿಲ್ಲಾಮಟ್ಟದಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ ಮತ್ತು ತ್ವರಿತ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆಯೂ ನಿರ್ದೇಶನ ನೀಡಿದರು.
ಪಡಿತರ ಫಲಾನುಭವಿಗಳ e-KYC ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ e-KYC ಅಪ್ಲಿಕೇಶನ್ ಅನ್ನು ನಾಳೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದರು.
ಹೊಸ ಅಪ್ಲಿಕೇಶನ್ನಿಂದ ಫಲಾನುಭವಿಗಳಿಗೆ e-KYC ಪ್ರಕ್ರಿಯೆ ಇನ್ನಷ್ಟು ಸುಲಭವಾಗಲಿದ್ದು, ಪಡಿತರ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಪರಿಣಾಮಕಾರಿ ವಿತರಣೆಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

