ಮೈಸೂರು: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ಕುರಿತಂತೆ ತೀವ್ರ ಚರ್ಚೆ ಆರಂಭವಾಗಿದೆ. ಕೆಲವು ವರ್ಷಗಳ ಹಿಂದೆ ಬಿಜೆಪಿ ಸೇರಿದ್ದ ಬಾಂಬೆ ಟೀಮ್ ಖ್ಯಾತಿಯ ನಾಯಕರು ಇದೀಗ ಬದಲಾದ ಪರಿಸ್ಥಿತಿಯಲ್ಲಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಸೇರುವ ಸಾಧ್ಯತೆಗಳಿವೆ ಎಂಬ ಮಾತುಗಳು ಹರಿದಾಡುತ್ತಿವೆ.
ಹಿಂದೆ ಆಪರೇಷನ್ ಕಮಲ ಮೂಲಕ ಬಿಜೆಪಿ ಸೇರಿರುವ ಅನೇಕರು ಇದೀಗ ಬಿಜೆಪಿ ನಾಯಕತ್ವ ಬಗ್ಗೆ ಅಸಮಾಧಾನ ಹೊರಹಾಕುತ್ತಿರುವ ವೈಖರಿಯು ಈ ಚರ್ಚೆಗಳಿಗೆ ತುಪ್ಪ ಸುರಿದಂತಿದೆ. ಈ ನಡುವೆ, ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. 10 ರಿಂದ 15 ಮಂದಿ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗಿರುವ ನಾಯಕರೊಂದಿಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ ಎಂದಿದ್ದಾರೆ. ಆದರೆ ಪಕ್ಷಕ್ಕೆ ಬರುವವರ ಹೆಸರನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದ್ದಾರೆ. ಪಕ್ಷಕ್ಕೆ ಬರುವವರ ಹೆಸರನ್ನು ಈಗ ಹೇಳಲು ಸಾಧ್ಯವಿಲ್ಲ. ಆದರೆ, ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದು ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಬಿಜೆಪಿಯ ಯಾವುದೇ ಶಾಸಕ ಪಕ್ಷ ಬಿಟ್ಟು ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಆಪರೇಷನ್ ಹಸ್ತ ನಡೆದರೆ ಎದಿರೇಟು ನೀಡಲು ಗೊತ್ತು ಎಂಬ ಸಂದೇಶವನ್ನು ಅವರು ಕಾಂಗ್ರೆಸ್ ಪಕ್ಷಕ್ಕೆ ರವಾನಿಸಿದ್ದಾರೆ.