ತುಮಕೂರು: ನಾಡಿನ ಸಂಸ್ಕೃತಿ, ಸಂಪ್ರದಾಯ ಮತ್ತು ಪರಂಪರೆಯ ವೈಭವವನ್ನು ಸಾರುವ ಮೂರನೇ ವರ್ಷದ ‘ತುಮಕೂರು ದಸರಾ ಉತ್ಸವ–2026’ರ ವಿಜಯದಶಮಿ ಸಂಭ್ರಮ ನಗರದಲ್ಲಿ ಕಳೆಗಟ್ಟಿತು. ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಉತ್ಸವದ ಅಂಗವಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ನಗರದ ಡಾ. ಬಾಲಗಂಗಾಧರನಾಥ ಸ್ವಾಮೀಜಿ ವೃತ್ತದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ಶ್ರೀ ಚಾಮುಂಡೇಶ್ವರಿ ದೇವಿಯ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಭಕ್ತಿ ನಮನ ಸಲ್ಲಿಸಿದರು.
ಬಳಿಕ ನಡೆದ ತುಮಕೂರು ದಸರಾ ಜಂಬೂಸವಾರಿ ಮೆರವಣಿಗೆ ಜನರ ಗಮನ ಸೆಳೆಯಿತು. ಪೊಲೀಸ್ ಇಲಾಖೆಯ ಅಶ್ವದಳ, ಜಾನಪದ ಕಲಾತಂಡಗಳು, ಆಕರ್ಷಕ ಹಳ್ಳಿಕಾರ್ ತಳಿಯ ಎತ್ತುಗಳು ಹಾಗೂ ವಿವಿಧ ಸಾಂಸ್ಕೃತಿಕ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಸಾರೋಟುಗಳಲ್ಲಿ ಸಾಗಿದ 50ಕ್ಕೂ ಹೆಚ್ಚು ಗ್ರಾಮ ದೇವತೆಗಳು ಹಾಗೂ ಗಜಗಾಂಭೀರ್ಯದಿಂದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ಚಾಮುಂಡೇಶ್ವರಿ ದೇವಿಯ ಮೆರವಣಿಗೆ ಭಕ್ತಿಭಾವದೊಂದಿಗೆ ಸಾಗಿತು.

ನಾಡಿನ ಪರಂಪರೆಯ ವೈಭವ, ಭಕ್ತಿ ಮತ್ತು ಸಾಂಸ್ಕೃತಿಕ ಸೊಬಗಿನ ಸಂಗಮವಾಗಿದ್ದ ಜಂಬೂಸವಾರಿ ತುಮಕೂರು ದಸರಾ ಉತ್ಸವಕ್ಕೆ ವಿಶೇಷ ಮೆರುಗು ನೀಡಿತು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

