ಮೀಸಲಾತಿ ಫೈಟ್; ಸೂಕ್ತ ನಿರ್ಧಾರದ ಭರವಸೆ ನೀಡಿದ ಸಿಎಂ; ಪಂಚಮಸಾಲಿ ಶ್ರೀಗಳ ಹೋರಾಟಕ್ಕೆ ಆರಂಭಿಕ ಜಯ

ಬೆಂಗಳೂರು: ಮೀಸಲಾತಿಯು ಸಮುದಾಯದ ಹಕ್ಕು ಆಗಿದ್ದು, ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ-2ಎ ಅಡಿ ಮೀಸಲಾತಿ ನೀಡಬೇಕೆಂಬ ಬೇಡಿಕೆ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಸುದೀರ್ಘ ಹೋರಾಟ ನಡೆಸುತ್ತಿರುವ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗದ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದರು.‌ ಸಮುದಾಯದ ಅಹವಾಲು ಸ್ವೀಕರಿಸಿದ ಸಿಎಂ, ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮೀಸಲಾತಿ ವಿಷಯದಲ್ಲಿ ಸರ್ಕಾರ ಮುಕ್ತಮನಸ್ಸು ಹೊಂದಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ಸರ್ಕಾರದ ನಿಲುವು. ಈ ವಿಚಾರದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಂತಿಮ ಶಿಫಾರಸ್ಸು ಕೈಸೇರಿದ ನಂತರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸಿಎಂ ತಿಳಿಸಿದರು.

Related posts