ಮಾ.7ರಂದು ‘ಫಲಾನುಭವಿಗಳ ಉತ್ಸವ’: ಎಸ್.ಟಿ.ಸೋಮಶೇಖರ್ ಸಾರಥ್ಯದಲ್ಲಿ ವಿನೂತನ ಕಾರ್ಯಕ್ರಮ

ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡಿರುವ ಫಲಾನುಭವಿಗಳ ಉತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಮಾ. 7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಫಲಾನುಭವಿಗಳ ಉತ್ಸವ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಮುಖ್ಯ ಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವರು. ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಜನ ಪ್ರತಿನಿಧಿಗಳು ಸಹಕರಿಸಬೇಕು. ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 27 ಸಾವಿರ ಫಲಾನುಭವಿಗಳು, ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ 10 ಸಾವಿರ ಫಲಾನುಭವಿಗಳು, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 5 ಸಾವಿರ ಫಲಾನುಭವಿಗಳು, ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ 4 ಸಾವಿರ ಫಲಾನುಭವಿಗಳು, ಶೂನ್ಯ ಬಡ್ಡಿ ದರದಲ್ಲಿ ಸಾಲ ಪಡೆದಿರುವ 3 ಸಾವಿರ ರೈತ ಫಲಾನುಭವಿಗಳನ್ನು ಸಹಕಾರ ಇಲಾಖೆಯ ವತಿಯಿಂದ ಕರೆತರಲಾಗುವುದು. ಒಟ್ಟಾರೆಯಾಗಿ 53 ಸಾವಿರ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ. ರಾಜೇಂದ್ರ ಮಾತನಾಡಿ ಫಲಾನುಭವಿಗಳ ಉತ್ಸವ ಕಾರ್ಯಕ್ರಮವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳನ್ನು ಕರೆತಂದು ಆಯೋಜಿಸಲಾಗುವುದು. ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಫಲಾನುಭವಿಗಳಿಗೆ ನೀಡಲಾಗುವುದು. ಸೌಲಭ್ಯಗಳನ್ನು ಪಡೆದಿರುವ ಕೆಲವು ಫಲಾನುಭವಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದರು.

ಪ್ರತಿ ಇಲಾಖೆಯವರು ಫಲಾನುಭವಿಗಳನ್ನು ಕರೆತರಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಗ್ರಾಮ ಪಂಚಾಯಿತಿಯ ಫಲಾನುಭವಿಗಳನ್ನು ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆ ಮಾಡಲಾಗುವುದು. ತಾಲ್ಲೂಕು ಮಟ್ಟದಲ್ಲಿ ಶಿಷ್ಟಾಚಾರ ಅನ್ವಯ ಶಾಸಕರು, ವಿಧಾನ ಪರಿಷತ್ ಸದಸ್ಯರನ್ನು ಆಹ್ವಾನಿಸಿ ಸಭೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ನಾಗೇಂದ್ರ, ಸಾ.ರಾ.ಮಹೇಶ್, ಮಂಜೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಾಟ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts