ಬೆಂಗಳೂರು: ಕೋವಿಡ್ 19 ಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ನವದೆಹಲಿ, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಒಟ್ಟು ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಆರೋಗ್ಯ ರಾಜ್ಯ ಖಾತೆ ಸಚಿವರಾದ ಅಶ್ವಿನಿಕುಮಾರ್ ಚೌಬೆ ಅವರು ಹಾಗೂ ಕೇಂದ್ರ ಆರೋಗ್ಯ ಮಂತ್ರಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಂವಾದದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಸೋಂಕಿತರು ಆಸ್ಪತ್ರೆಗೆ ದಾಖಲಾದ ನಂತರ ಅವರಿಗೆ ಅಗತ್ಯವಿರುವ ಚಿಕಿತ್ಸೆ, ಔಷಧಿಗಳು ಮತ್ತು ಆಕ್ಷಿಜನ್ ಲಭ್ಯತೆಯನ್ನು ಖಾತ್ರಿಪಡಿಸಲಾಗುತ್ತಿದೆ ಎಂದವರು ಕೇಂದ್ರದ ಗಮನಸೆಳೆದರು.
ರಾಜ್ಯದಲ್ಲಿ ಪರೀಕ್ಷಾ ಸೌಲಭ್ಯಗಳನ್ನು ಸಾಕಷ್ಟು ಹೆಚ್ಚಿಸಲಾಗಿದೆ. ಪ್ರಸ್ತುತ ನಮ್ಮಲ್ಲಿ 136 ಪರೀಕ್ಷಾ ಪ್ರಯೋಗಾಲಯಗಳಿದ್ದು, ಪ್ರತಿ ದಿನದ ಪರೀಕ್ಷಾ ಸಾಮಥ್ರ್ಯವನ್ನು 70 ಸಾವಿರ ಮಾದರಿಗಳಿಗೆ ಹೆಚ್ಚಿಸಲಾಗಿದೆ. ಈವರೆಗೆ 43 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ವಿವರಿಸಿದ ಯಡಿಯೂರಪ್ಪ, ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವ symptomatic ಪ್ರಕರಣಗಳನ್ನು ಕೂಡಲೇ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಈ ಉದ್ದೇಶಕ್ಕಾಗಿಯೇ ಆಂಬ್ಯುಲೆನ್ಸ್ಗಳ ಸಂಖ್ಯೆಯನ್ನು 800 ರಿಂದ 2000ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.