ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಬೆಂಗಳೂರಿನ ಪಿಂಕ್ ಮೆಟ್ರೋ ಮಾರ್ಗದ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮೆಟ್ರೋ ಮಾರ್ಗಕ್ಕೆ ಮಧ್ಯಾಹ್ನ 12.45ಕ್ಕೆ ತಾವರೆಕೆರೆ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಲಿದ್ದಾರೆ. ಬಳಿಕ ತಾವರೆಕೆರೆಯಿಂದ ಐಐಎಂಬಿ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.
ಮೋದಿ ಅವರು ಅಂದು ಬೆಳಗ್ಗೆ 10.05ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 10.45ಕ್ಕೆ ಪ್ರಶಾಂತಿ ಕುಟೀರಂನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1.15ಕ್ಕೆ ಐಐಎಂಬಿ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ರಾಷ್ಟ್ರಕ್ಕೆ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿರುವ ಪ್ರಧಾನಿ, 3.30ಕ್ಕೆ ಕೆ.ಸಿ. ಲೇಔಟ್ ಪಾರ್ಕ್ನಲ್ಲಿ ನಡೆಯುವ ಭಾರತ್ ವ್ಯಾನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಜೆ 4 ಗಂಟೆಗೆ ಪ್ರಧಾನಿ ಮೋದಿ ಅವರು ಮೈಸೂರು ಕಾಸ್ಮೋಸ್ ಉದ್ಘಾಟಿಸಲಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ಡೋಮ್ ಪ್ಲಾನೆಟೋರಿಯಂ ನಿರ್ಮಿಸಲಾಗಿದ್ದು, ಮೈಸೂರು ವಿಶ್ವವಿದ್ಯಾಲಯದ ಶ್ರೀ ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರದ ಆವರಣದಲ್ಲಿ ಇದು ತಲೆ ಎತ್ತಿದೆ.
ಕಾರ್ಯಕ್ರಮಗಳ ಬಳಿಕ ಸಂಜೆ 6.05ಕ್ಕೆ ಪ್ರಧಾನಿ ಮೋದಿ ಮೈಸೂರಿನಿಂದ ನವದೆಹಲಿಗೆ ನಿರ್ಗಮಿಸಲಿದ್ದಾರೆ.

