ಬೆಂಗಳೂರು: ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿಧಿವಶರಾಗಿದ್ದಾರೆ. ಬೆಂಗಳೂರಿನ ಹೊಸಕೋಟೆಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ಹೃದಯಾಘಾತಕ್ಕೊಳಗಾಗಿ ಕೊನೆಯಿಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಿಧಾನಸಭೆಯ ಅವಧಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು. ಈ ಆರೋಪವನ್ನೇ ಮುಂದಿಟ್ಟು ವಿರೋಧ ಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷ ‘ಪೇ ಸಿಎಂ’ ಅಭಿಯಾನ ನಡೆಸಿತ್ತು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣನವರು ಇತ್ತೀಚೆಗಷ್ಟೇ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ವಾಪಸ್ಸಾಗಿದ್ದರು. ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತಕ್ಕೊಳಗಾದ ಅವರು ಕೊನೆಯುಸಿರೆಳೆದರು ಎಂದು ಸಂಬಂಧಿಕರು ಹೇಳಿದ್ದಾರೆ.