ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ ಮೊಳಗಿರುವ ಬಗ್ಗೆ ಬಿಜೆಪಿ ನಾಯಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಾಮಾಜಿಕ ಜಾಲತಾಣ’X’ನಲ್ಲಿ ಪೋಸ್ಟ್ ಹಾಕಿದ್ದಾರೆ.

ಚಿಕ್ಕಮಗಳೂರಲ್ಲಿ ಬೈಕ್ ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ ಎಂದವರು ಹೇಳಿದ್ದಾರೆ.

ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ. ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ NIA ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಒತ್ತಾಯಿಸಿದ್ದಾರೆ.‌

Related posts