ಬೆಂಗಳೂರು: ರಾಜ್ಯ ವಿಧಾನಪರಿಷತ್ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಜಯಭೇರಿ ಬಾರಿಸಿದೆ. ನಾಲ್ಕೂ ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ಗೆ ಹಿನ್ನಡೆ ಉಂಟುಮಾಡಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದರೆ, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ್ ಗೆಲುವು ದಾಖಲಿಸಿದ್ದಾರೆ.

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ವಿರುದ್ಧ ಸ್ಪಷ್ಟ ಅಂತರದ ಗೆಲುವು ಸಾಧಿಸಿದ್ದಾರೆ. ನಮೋಶಿ 15,596 ಪ್ರಾಶಸ್ತ್ಯದ ಮತಗಳನ್ನು ಪಡೆದರೆ, ಶರಣಪ್ಪ ಮಟ್ಟೂರು 12,299 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ನಮೋಶಿ 3,297 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ನಾಲ್ಕೂ ಕ್ಷೇತ್ರಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಎನ್ಡಿಎ ಪಾಳಯದಲ್ಲಿ ಉತ್ಸಾಹ ಮೂಡಿಸಿದೆ.

