ಪ್ಯಾರಿಸ್ ಒಲಿಂಪಿಕ್ಸ್: ಬೆಳ್ಳಿ ಗೆದ್ದ ನೀರಜ್ ಚೋಪ್ರಾ; ಭಾರತಕ್ಕೆ 5ನೇ ಪದಕ

ಪ್ಯಾರಿಸ್: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 5ನೇ ಪದಕ ಸಿಕ್ಕಿದೆ. ಭಾರತದ ನೀರಜ್ ಚೋಪ್ರಾ ಅವರು ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಚಿನ್ನ ಗೆಲ್ಲುವ ಉತ್ಸಾಹದಲ್ಲಿದ್ದ ನೀರಜ್ ಚೋಪ್ರಾ, ಬೆಳ್ಳಿ ಗೆದ್ದು ಬೀಗಿದ್ದಾರೆ. 2020ರ ಒಲಿಂಪಿಕ್ಸ್‌ನಲ್ಲಿ ಅವರು 87.58 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದಿದ್ದರು. ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀಟರ್ ದೂರ ಜಾವೆಲಿನ್ ಎಸೆದರಾದರೂ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಅಚ್ಚರಿಯ ಸಂಗತಿ ಎಂದರೆ, ಕಳೆದ ಒಲಿಂಪಿಕ್ಸ್​ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದ ಪಾಕಿಸ್ತಾನದ ಅರ್ಷದ್ ನದೀಮ್ ಈ ಬಾರಿ ದಾಖಲೆಯ 92.97 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನ ಗೆದ್ದಿದ್ದಾರೆ. ಜೊತೆಗೆ ಹೊಸ ದಾಖಲೆ ನಿರ್ಮಿಸಿದ್ದಾರೆ.