ವಿನಯ್ ಆತ್ಮಹತ್ಯೆ ಪ್ರಕರಣ: ಪೊನ್ನಣ್ಣ ತಲೆದಂಡಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಪಟ್ಟುಹಿಡಿದಿದೆ. ಈ ಸಂಬಂಧ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಇದೇ ವೇಳೆ, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾರಣರಾಗಿರುವವರ ಶಾಸಕರ ವಿರುದ್ಧ ಕೂಡಲೇ FIR ದಾಖಲಿಸಿ, ಬಂಧಿಸಲು ಒತ್ತಾಯಿಸಿ ಕುಶಾಲನಗರದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ನಡೆದ ಪ್ರತಿಭಟನೆ ಗಮನಸೆಳೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಕುಶಾಲನಗರದಲ್ಲಿರುವ ಉಪ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು.

ಈ ಸಂಬಂಧ ಕೊಡಗು ಜಿಲ್ಲೆ ಕುಶಾಲನಗರದಲ್ಲೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವು ಸಾವಿನ ಮೇಲೆ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.

Related posts