ನವದೆಹಲಿ: 2025-26ನೇ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ.7.7 ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ ಶೇ.7.8ರಷ್ಟು ಬೆಳವಣಿಗೆ ದಾಖಲಿಸಿರುವುದು ದೇಶದ ಆರ್ಥಿಕ ಶಕ್ತಿಯನ್ನು ತೋರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ Xನಲ್ಲಿ ಪ್ರತಿಕ್ರಿಯಿಸಿದ ಅವರು, ಈ ಸಾಧನೆ ಆರ್ಥಿಕ ಸುಧಾರಣೆಗಳ ಯಶಸ್ಸು ಹಾಗೂ 140 ಕೋಟಿ ಭಾರತೀಯರ ಪರಿಶ್ರಮದ ಫಲ ಎಂದು ಹೇಳಿದರು.
“ಭಾರತದ ಬೆಳವಣಿಗೆಯ ಆವೇಗ ಇನ್ನೂ ಬಲವಾಗಿದೆ. ಜಾಗತಿಕ ಅನಿಶ್ಚಿತತೆಗಳ ನಡುವೆಯೂ ದೇಶದ ಆರ್ಥಿಕತೆ ಸ್ಥಿರತೆ ಮತ್ತು ಸಾಮರ್ಥ್ಯವನ್ನು ಪ್ರದರ್ಶಿಸಿದೆ,” ಎಂದು ಮೋದಿ ಅಭಿಪ್ರಾಯಪಟ್ಟರು.

ಜನರ ಜೀವನಮಟ್ಟ ಸುಧಾರಣೆ ಮತ್ತು ಉದ್ಯಮಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣದತ್ತ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು. “ಜೀವನದ ಸುಲಭತೆ ಹಾಗೂ ವ್ಯವಹಾರ ಮಾಡುವ ಸುಲಭತೆಯನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಲು ನಾವು ಎಲ್ಲ ಪ್ರಯತ್ನಗಳನ್ನೂ ಮುಂದುವರಿಸುತ್ತೇವೆ,” ಎಂದು ತಿಳಿಸಿದರು.
ಆರ್ಥಿಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸರ್ಕಾರ ಆದ್ಯತೆ ನೀಡಲಿದ್ದು, ಯುವಜನರಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸುವತ್ತ ಗಮನ ಹರಿಸಲಾಗುವುದು ಎಂದು ಪ್ರಧಾನಿ ಹೇಳಿದರು.

