ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ದಿಢೀರ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಿಡ್ನಿ: ಭಾರತ-ಆಸ್ಟ್ರೇಲಿಯಾ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವಾಗ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದು, ಈಗ ಅವರನ್ನು ತೀವ್ರ ನಿಗಾದಲ್ಲಿರಿಸಲಾಗಿದೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಹರ್ಷಿತ್ ರಾಣಾ ಎಸೆದ ಚೆಂಡಿಗೆ ಅಲೆಕ್ಸ್ ಕ್ಯಾರಿ ಬಲಾಢ್ಯ ಹಿಟ್‌ ಬಾರಿಸಿದ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದರು. ಈ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟು ಬಿದ್ದಿದ್ದು, ತಕ್ಷಣವೇ ಮೈದಾನದಿಂದ ಹೊರಗೆ ಕರೆದೊಯ್ಯಲಾಯಿತು.

ಆಸ್ಪತ್ರೆಯಲ್ಲಿ ವೈದ್ಯರು ಪ್ರಾಥಮಿಕ ಪರೀಕ್ಷೆ ನಡೆಸಿದ ಬಳಿಕ ಪೆಕ್ಕೆಲುಬು ಹತ್ತಿರದ ಅಂಗಾಂಗಗಳಲ್ಲಿ ಆಂತರಿಕ ರಕ್ತಸ್ರಾವವಾಗಿರುವುದು ಪತ್ತೆಯಾಗಿದೆ. ಇದರ ಹಿನ್ನೆಲೆಯಲ್ಲಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯಕೀಯ ಮೂಲಗಳ ಪ್ರಕಾರ, ಅಯ್ಯರ್ ಅವರ ಸ್ಥಿತಿ ಸ್ಥಿರವಾಗಿದ್ದರೂ ಮುಂದಿನ 48 ಗಂಟೆಗಳು ನಿರ್ಣಾಯಕವಾಗಿವೆ.

ಶ್ರೇಯಸ್ ಅಯ್ಯರ್ ಸದ್ಯ ಸಿಡ್ನಿಯ ಆಸ್ಪತ್ರೆಯ ತೀವ್ರ ನಿಗಾದ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಬೇಕಾಗಿದೆ ಎಂದು ಮೂಲಗಳು ತಿಳಿಸಿವೆ. ರಕ್ತಸ್ರಾವ ನಿಯಂತ್ರಣಕ್ಕೆ ಬರದಿದ್ದರೆ, ಅವರ ವಾಸ್ತವ್ಯ ವಿಸ್ತರಿಸುವ ಸಾಧ್ಯತೆ ಇದೆ.

ಬಿಸಿಸಿಐ ವೈದ್ಯಕೀಯ ತಂಡವು ಸಿಡ್ನಿ ಹಾಗೂ ಭಾರತದ ತಜ್ಞರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಯ್ಯರ್ ಅವರ ಚೇತರಿಕೆಯ ಪ್ರಗತಿಯನ್ನು ನಿಗದಿತ ಅವಧಿಯಲ್ಲಿ ಮೌಲ್ಯಮಾಪನ ಮಾಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

Related posts