ಬೆಂಗಳೂರು: ರಾಜ್ಯ ರಾಜಕಾರಣ ಇಂದು ಅಚ್ಚರಿಯ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಸರ್ಕಾರವನ್ನು ಸಮರ್ಥಿಸುತ್ತಾ ಬಂದಿರುವ ಸಚಿವ ಕೆ.ಎನ್.ರಾಜಣ್ಣ ಅವರು ರಾಜೀನಾಮೆ ನೀಡಿ ಸಿದ್ದರಾಮಯ್ಯನವರ ಸಂಪುಟದಿಂದ ಹೊರ ನಡೆದಿದ್ದಾರೆ.
ರಾಹುಲ್ ಗಾಂಧಿ ನೀಡಿದ್ದ ಮತಗಳ್ಳತನ ಆರೋಪ ಬಗ್ಗೆ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದ ರಾಜಣ್ಣ ಅವರು ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ.
ಸಹಕಾರ ಸಚಿವ ಕೆಎನ್ ರಾಜಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದ್ದು, ಈ ಬಗ್ಗೆ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಈ ಸಂದರ್ಭದಲ್ಲಿ ಸದನದಲ್ಲಿ ಗದ್ದಲ ಉಂಟಾಯಿತು. ಆ ವೇಳೆ ಸ್ಪೀಕರ್ ಸೂಚನೆ ಹಿನ್ನೆಲೆಯಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ ಈ ಬಗ್ಗೆ ಮುಖ್ಯಮಂತ್ರಿಯವರು ಹೇಳಿಕೆ ನೀಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಸಿಎಂ ಆಪ್ತ ಮೂಲಗಳ ಹೇಳಿಕೆ:
ಕೆ.ಎನ್.ರಾಜಣ್ಣ ಅವರು ಪಕ್ಷದ ನಾಯಕರ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ, ಕಾಂಗ್ರೆಸ್ ಪಕ್ಷದೊಳಗಿನ ವಿದ್ಯಮಾನವೇ ಬೇರೆ. ಇತ್ತೀಚಿನ ದಿನಗಳಲ್ಲಿ ನಾಯಕತ್ವದ ಬದಲಾವಣೆ, ಚುನಾವಣಾ ಆಯೋಗದ ವಿರುದ್ಧದ ರಾಹುಲ್ ಗಾಂಧಿ ಆರೋಪದ ಕುರಿತು ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯ ಹೇಳಿಕೆಗಳನ್ನು ಕೆಎನ್ ರಾಜಣ್ಣ ನೀಡುತ್ತಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜಣ್ಣ ಅವರ ವಜಾಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ರಾಜಣ್ಣ ಅವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ರಾಜ್ಯಪಾಲರಿಗೆ ಪಾತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.