ಬೆಂಗಳೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯ ಸಾಧಿಸಿದ ಬೆನ್ನಲ್ಲೇ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಬಿಜೆಪಿ–ಜೆಡಿಎಸ್ ಮೈತ್ರಿಯಾಗಿ ಎದುರಿಸುವ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ.
ಸುಪ್ರೀಂ ಕೋರ್ಟ್ ಜೂನ್ 30ರೊಳಗೆ ಜಿಬಿಎ (ಗ್ರೇಟರ್ ಬೆಂಗಳೂರು ಅಥಾರಿಟಿ) ಚುನಾವಣೆ ನಡೆಸುವಂತೆ ಆದೇಶ ನೀಡಿರುವ ಹಿನ್ನೆಲೆ ಜೆಡಿಎಸ್ ಪಕ್ಷ ಸಭೆ ನಡೆಸಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್ ಪಕ್ಶಕ್ಕೆ ಸವಾಲೊಡ್ಡಲು ಮೈತ್ರಪಕ್ಷಗಳು ಕಾರ್ಯತಂತ್ರದಲ್ಲಿ ತೊಡಗಿವೆ.
ಈ ನಡುವೆ, ಜಾತ್ಯತೀತ ದಳ ನಾಯಕರೂ ಆದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದು, ಜಿಬಿಎ ಚುನಾವಣೆಯನ್ನು ಬಿಜೆಪಿ–ಜೆಡಿಎಸ್ ಮೈತ್ರಿಯಾಗಿ ಎದುರಿಸುವುದು ಸೂಕ್ತ ಎಂದು ಹೇಳಿದ್ದಾರೆ.
ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಹೇಳಿಕೆ ನೀಡಿದ್ದರಿಂದ ಗೊಂದಲ ಉಂಟಾಗಿತ್ತು. ಆದರೆ, ಈಗ ಆ ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಪಕ್ಷವು ಮೈತ್ರಿ ರಾಜಕೀಯದತ್ತ ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ರಾಜ್ಯದಲ್ಲಿ ಸ್ಥಳೀಯ ಚುನಾವಣೆಗಳ ದಿನಾಂಕ ಸಮೀಪಿಸುತ್ತಿರುವಂತೆ, ಬಿಜೆಪಿ–ಜೆಡಿಎಸ್ ಮೈತ್ರಿ ಕುರಿತ ಅಧಿಕೃತ ಘೋಷಣೆಗೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.
